ಸಿಜೆಪಿಯಿಂದ ‘ಸಂಸತ್ ಚಲೋ’ ಪ್ರೊಟೆಸ್ಟ್ – ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್!
'Sansad Chalo' Protest – Lathi-charge on CJP protesters!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದೆ. ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸದಸ್ಯರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಸಿಜೆಪಿ ಪಕ್ಷವು ಇಂದು ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗೆ ‘ಸಂಸತ್ ಚಲೋ’ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿತ್ತು. ಪಕ್ಷದ ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದ ಸಿಜೆಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು, ಘೋಷಣೆಗಳನ್ನು ಕೂಗುತ್ತಾ ಸಂಸತ್ತಿನತ್ತ ಮುನ್ನಡೆಯಲು ಯತ್ನಿಸಿದರು.
ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದು, ಪರಿಸ್ಥಿತಿ ಕೈಮೀರಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹಲವು ಪ್ರಮುಖ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ಜಂತರ್ ಮಂತರ್ ರಸ್ತೆಯ ಸುತ್ತಲೂ ಮುಂಚಿತವಾಗಿಯೇ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಕಬ್ಬಿಣದ ಬ್ಯಾರಿಕೇಡ್‌ಗಳ ಮೂಲಕ ಸೀಲ್ ಮಾಡಲಾಗಿತ್ತು. ಪ್ರತಿಭಟನಾಕಾರರು ಪೊಲೀಸ್ ಕಾವಲನ್ನು ಮೀರಿ ಮುನ್ನುಗ್ಗಿದಾಗ, ಪರಿಸ್ಥಿತಿ ಹದ್ದುಬಸ್ತಿಗೆ ತರಲು ಪೊಲೀಸರು ಹಗುರ ಲಾಠಿಚಾರ್ಜ್ ನಡೆಸಿದ್ದಾರೆ.
ಸಂಸತ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇಡೀ ದೆಹಲಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS) ಸೆಕ್ಷನ್ 163 (ಹಳೆಯ ಸಿಆರ್‌ಪಿಸಿ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.




