ದೆಹಲಿಯಲ್ಲಿ ತೀವ್ರಗೊಂಡ ಸಿಜೆಪಿ ಪ್ರೊಟೆಸ್ಟ್ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು!
CJP protest intensifies in Delhi – Demand for Dharmendra Pradhan's resignation!

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ಉಗ್ರರೂಪ ಪಡೆದುಕೊಂಡಿದೆ. ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ‘ಕಾಕ್ರೋಚ್ ಪಾರ್ಟಿ ಪ್ರೊಟೆಸ್ಟ್’ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಯುವಜನ ಸಂಘಟನೆಗಳು ಬೃಹತ್ ಧರಣಿ ನಡೆಸಿವೆ. ಜಂತರ್ ಮಂತರ್ನತ್ತ ಸಾವಿರಾರು ವಿದ್ಯಾರ್ಥಿಗಳ ಸಮೂಹ ಹರಿದುಬರುತ್ತಿದ್ದು, ಸರ್ಕಾರ ಹಾಗೂ ಶಿಕ್ಷಣ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ನವದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದೆಹಲಿ ಮೆಟ್ರೋ ರೈಲು ನಿಗಮ (DMRC) ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದು, ಭದ್ರತಾ ದೃಷ್ಟಿಯಿಂದ ಇಂದು 17 ಪ್ರಮುಖ ಮೆಟ್ರೋ ಸ್ಟೇಷನ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಪ್ರತಿಭಟನೆಯ ಕೇಂದ್ರಬಿಂದುವಾಗಿರುವ ಜಂತರ್ ಮಂತರ್ ಪ್ರದೇಶದಲ್ಲಿ ಹೆಜ್ಜೆ ಹೆಜ್ಜೆಗೂ ಪೋಲಿಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಮತ್ತೊಂದೆಡೆ, ಪ್ರತಿಭಟನೆಯಲ್ಲಿ ಯಾರೂ ಭಾಗವಹಿಸದಂತೆ ದೆಹಲಿ ವಿಶ್ವವಿದ್ಯಾಲಯ (DU) ತನ್ನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಚುರುಕುಗೊಂಡಿದೆ. ದೆಹಲಿಯ ‘ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾ’ದಲ್ಲಿ ಸಿಜೆಪಿ ನಿಯೋಗವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದು, ಪ್ರಮುಖ ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದೆ.




