ಕರ್ನಾಟಕದಲ್ಲಿ ಮುಂಗಾರು ಚುರುಕು – 3 ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಣೆ!
Monsoon intensifies in Karnataka - Orange alert declared for three districts!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಈ ನಡುವೆ ರಾಜ್ಯದ ಕೆಲವೆಡೆ ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು ಕರಾವಳಿಯ ಎರಡು ಹಾಗೂ ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಪ್ರಮುಖ ಜಿಲ್ಲೆಯಾದ ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಬಲವಾದ ಗಾಳಿಯೊಂದಿಗೆ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೋಲಾರ, ಕೊಡಗು, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.




