ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರುವರೆಗೆ ವಿಸ್ತರಣೆ!
Madagaon - Mangalore Vande Bharat train extension to Bangalore!

ಬೆಂಗಳೂರು : ಉತ್ತರ ಕನ್ನಡ ಹಾಗೂ ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅಧಿಕೃತ ಹಸಿರು ನಿಶಾನೆ ತೋರಿದೆ. ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ರಾಜಧಾನಿ ಬೆಂಗಳೂರುವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, “ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸದಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು ಮಾರ್ಚ್ 11 ರಂದು ನಾನು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದೆ. ನಮ್ಮ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುರ್ಡೇಶ್ವರ, ಗೋಕರ್ಣ ಹಾಗೂ ಕಾರವಾರ ಮಾರ್ಗವಾಗಿ ರಾಜಧಾನಿ ಬೆಂಗಳೂರಿನವರೆಗೆ ವಿಸ್ತರಿಸಿ ಆದೇಶಿಸಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಈ ರೈಲು ಪರಿಷ್ಕೃತ ಸಮಯದೊಂದಿಗೆ ರೈಲು ಸಂಖ್ಯೆ 26655/26656 ಯಶವಂತಪುರ – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿ ಸಂಚರಿಸಲಿದೆ. ಈ ನಿರ್ಧಾರದಿಂದ ಕರಾವಳಿ ಜಿಲ್ಲೆಗಳು, ಉತ್ತರ ಕನ್ನಡ ಭಾಗದ ಜನರಿಗೆ, ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಹಾಗೂ ಪ್ರವಾಸೋದ್ಯಮಕ್ಕೆ ಅಪಾರ ಅನುಕೂಲವಾಗಲಿದೆ.
ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಮಸ್ತ ಕ್ಷೇತ್ರದ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.




