ವಿಜಯಲಕ್ಷ್ಮೀ ಅರ್ಜಿ ವಜಾ – ದರ್ಶನ್‌ಗೆ ಮತ್ತೆ ಹಿನ್ನಡೆ!
Vijayalakshmi's plea rejected – another setback for Darshan!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರದೋಷ್ ಅನ್ನು ‘ಮಾಫಿ ಸಾಕ್ಷಿ’ ಎಂದು ಪರಿಗಣಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರದೋಷ್ ಮಾಫಿ ಸಾಕ್ಷಿ ಅರ್ಹತೆಯನ್ನು ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಈ ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿದೆ.
ಮಾಫಿ ಸಾಕ್ಷ್ಯವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂಬ ದರ್ಶನ್ ಪರ ಹಿರಿಯ ವಕೀಲರ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಅರ್ಜಿಯನ್ನು ವಜಾಗೊಳಿಸಿದ ಬಳಿಕವೂ ವಿಜಯಲಕ್ಷ್ಮಿ ಪರ ವಕೀಲ ನಾಗಮುತ್ತು ವಾದ ಮುಂದುವರಿಸಲು ಪ್ರಯತ್ನಿಸಿದರು. ಆದರೆ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ವಾದವನ್ನು ಆಲಿಸಲು ಸುಪ್ರೀಂಕೋರ್ಟ್ ಮುಂದಾಗಲಿಲ್ಲ.




