
ಉಡುಪಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಕುಟುಂಬ ಸಮೇತರಾಗಿ ವಿಶೇಷ ‘ನವಚಂಡಿಕಾ ಯಾಗ’ವನ್ನು ನೆರವೇರಿಸಿದ್ದಾರೆ.
ಇಂದು ಮುಂಜಾನೆಯಿಂದ ದೇವಸ್ಥಾನದಲ್ಲಿ ಅವರು ಕುಟುಂಬಿಕರ ಜೊತೆ ವಿಶೇಷ ಸೇವೆ ಸಲ್ಲಿಸಲಿದ್ದಾರೆ. ಕೇಂದ್ರ ಮಂತ್ರಿ ಹೆಚ್.ಡಿ.ಕೆ. ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತವರ ಪತ್ನಿ ಹಾಗೂ ಕುಟುಂಬಸ್ಥರು ಜೊತೆಗಿದ್ದಾರೆ.
ಸಚಿವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ದೇವಸ್ಥಾನಕ್ಕೆ ಆಗಮಿಸಿದ ಸಚಿವರಿಗೆ ಮತ್ತು ಅವರ ಕುಟುಂಬಕ್ಕೆ ಧರ್ಮದರ್ಶಿಗಳು ಹಾಗೂ ಸ್ಥಳೀಯ ಮುಖಂಡರು ಆತ್ಮೀಯ ಸ್ವಾಗತ ಕೋರಿದರು.
ಸುಮಾರು ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಹರಕೆಯ ಹಿನ್ನೆಲೆಯಲ್ಲಿ ಹಾಗೂ ದೋಷ ಪರಿಹಾರಾರ್ಥವಾಗಿ ನವಚಂಡಿಕಾಯಾಗವನ್ನು ನೆರವೇರಿಸಲಾಯಿತು. ಕೊಲ್ಲೂರಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.




