ರಾಜ್ಯ

ವಿವಿಧ ಬೇಡಿಕೆಗೆ ಆಗ್ರಹ – ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ!

Demanding various concessions – ASHA workers stage a day-and-night sit-in!

ಬೆಂಗಳೂರು : ಕನಿಷ್ಠ ಮಾಸಿಕ ₹15 ಸಾವಿರ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಕಾರ್ಯಕರ್ತೆಯರು, ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಹೋರಾಟ ಮುಂದುವರಿಸಿದ್ದಾರೆ.

ಮನೆ, ಮಠ ಬಿಟ್ಟು ಬೆಂಗಳೂರಿಗೆ ಬಂದಿರುವ ಆಶಾ ಕಾರ್ಯಕರ್ತೆಯರು, ಬೇಡಿಕೆಗಳು ಈಡೇರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹಲವು ಕಾರ್ಯಕರ್ತೆಯರು ತಮ್ಮ ಪುಟ್ಟ ಮಕ್ಕಳ ಜೊತೆಯಲ್ಲೇ ಧರಣಿಯಲ್ಲಿ ಭಾಗವಹಿಸಿರುವುದು ಹೋರಾಟದ ತೀವ್ರತೆಗೆ ಸಾಕ್ಷಿಯಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ ಮತ್ತು ಅವರ ಪ್ರಮುಖ ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ. ಇಂದಿನ ಕ್ಯಾಬಿನೆಟ್‌ ಸಭೆಯಲ್ಲೇ ಸರ್ಕಾರ ತಮ್ಮ ಪರವಾಗಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಆಶಾಗಳು ಒತ್ತಾಯಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ ₹15,000 ನಿಶ್ಚಿತ ಮಾಸಿಕ ಗೌರವಧನ ನೀಡಬೇಕು. ತೀವ್ರ ಅನಾರೋಗ್ಯ ಮತ್ತು ಕಾಯಿಲೆಗಳ ಅವಧಿಯಲ್ಲಿ 3 ತಿಂಗಳ ಗೌರವಧನ ನೀಡಬೇಕು. ಪಶ್ಚಿಮ ಬಂಗಾಳ ಮಾದರಿಯಲ್ಲಿ ಸೇವಾ ನಿವೃತ್ತಿ ಇಡಿಗಂಟನ್ನು ₹5 ಲಕ್ಷಕ್ಕೆ ಏರಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ನಿರಂತರ ಹೋರಾಟ ಹಾಗೂ ವಾತಾವರಣದ ಏರುಪೇರಿನ ನಡುವೆ ಇಬ್ಬರು ಆಶಾ ಕಾರ್ಯಕರ್ತೆಯರು ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ಮತ್ತಷ್ಟು ಉಗ್ರರೂಪ ಪಡೆಯುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights