ರಾಜಕೀಯ

ವಿನಯ್ ಕುಲಕರ್ಣಿ ಜಾಮೀನು ರದ್ದು – ಶಾಸಕ ಸ್ಥಾನದಿಂದಲೂ ಅನರ್ಹ!

Vinay Kulkarni's bail cancelled – also disqualified as an MLA!

ನವದೆಹಲಿ : ಧಾರವಾಡದ ಜಿಲ್ಲಾ ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬಿಗ್‌ ಶಾಕ್‌ ನೀಡಿದೆ. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಮುಂದಿನ 2 ವಾರಗಳಲ್ಲಿ ಜೈಲಿಗೆ ಶರಣಾಗುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ಅವರಿಗೆ ಈ ಹಿಂದೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ, ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖಾ ಸಂಸ್ಥೆಯಾದ ಸಿಬಿಐ (CBI) ಹಾಗೂ ಮೃತ ಯೋಗೀಶ್ ಗೌಡ ಅವರ ಸಹೋದರ ಗುರುನಾಥಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಈ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು, ಸಿಬಿಐ ಮತ್ತು ಗುರುನಾಥಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿ ಅವರಿಗೆ ಎರಡು ವಾರಗಳ ಒಳಗಾಗಿ ನ್ಯಾಯಾಲಯದ ಮುಂದೆ ಶರಣಾಗಿ ಜೈಲಿಗೆ ತೆರಳುವಂತೆ ಆದೇಶಿಸಿದೆ.

ಶಾಸಕ ಸ್ಥಾನದಿಂದಲೂ ಅನರ್ಹ : ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸುತ್ತಿದ್ದಂತೆಯೇ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಈ ಹಿಂದೆ ಪ್ರಕರಣದಲ್ಲಿ ಶಿಕ್ಷೆಯಾದಾಗ ಜನಪ್ರತಿನಿಧಿಗಳ ಕಾಯ್ದೆಯಡಿ ಅವರ ಶಾಸಕ ಸ್ಥಾನ ಅನರ್ಹಗೊಂಡಿತ್ತು. ತದನಂತರ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಿದ ಬಳಿಕ, ಅನರ್ಹತೆ ಆದೇಶವನ್ನು ಹಿಂಪಡೆಯಲಾಗಿತ್ತು. ಇದೀಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿರುವುದರಿಂದ, ವಿನಯ್ ಕುಲಕರ್ಣಿ ಅವರು ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights