
ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರತಿಭಟನಾಕಾರರು ಆಗಮಿಸಲಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?
1. ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್ಸಿಎಚ್ ಪೋರ್ಟಲ್ ಅನ್ನು ಡೀಲಿಂಕ್ ಮಾಡಬೇಕು.
2. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ. ಒಟ್ಟು ಪ್ರೋತ್ಸಾಹ ಧನ ನೀಡಬೇಕು.
3. ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ
4. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2000 ರೂ.ನಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
5. 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 3 ಲಕ್ಷ ರೂ.ಗೆ ಹೆಚ್ಚಿಸುವುದು.
6. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.
7. ಸುವರ್ಣ ಆರೋಗ್ಯ ಟ್ರಸ್ಟ್ ನ ಆರೋಗ್ಯ ವಿಮಾ ಯೋಜನೆಯಂತೆ 5 ಲಕ್ಷ ರೂ. ವರೆಗೆ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಆಶಾ ಮತ್ತು ಆಶಾ ಕುಟುಂಬಕ್ಕೆ ನೀಡಬೇಕು.
8. ಕಳೆದ 2 ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು.
9. ಕಳೆದ 4 ವರ್ಷದಿಂದ ನೀಡದಿರುವ ಪ್ರತೀ ವರ್ಷ ನೀಡುವ ಡೈರಿಯನ್ನು ನಿಗದಿತ ಸಮಯಕ್ಕೆ ಒದಗಿಸಬೇಕು.
https://www.youtube.com/watch?v=YqIuTjIegIk




