ಚಿಕ್ಕಬಳ್ಳಾಪುರ: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ಸಾಗುತ್ತಿದ್ದ ‘ಸುಗಮ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಬಸ್ ಹಾಗೂ ಹೈದರಾಬಾದ್ ಕಡೆಗೆ ಹೊಸ ಬೈಕ್ಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮಧ್ಯರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಬಿಹಾರ ಮೂಲದ ಸುಹಾಸ್ (20) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 12 ಮಂದಿ ಗಾಯಾಳುಗಳನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೃತ ಸುಹಾಸ್ ತನ್ನ ಸ್ನೇಹಿತರೊಂದಿಗೆ ಕಂಟೇನರ್ ವಾಹನದಲ್ಲಿ ಬಿಹಾರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಹಾಗೂ ಚಿಕ್ಕಬಳ್ಳಾಪುರ ಪೊಲೀಸರು, ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


