ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.