ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ (CBI) ಇದೀಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಬಿ. ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ಸಮನ್ಸ್ ನೀಡಿದ್ದರು. ಈ ವೇಳೆ ಬಂಧನದ ಭೀತಿಯಲ್ಲಿದ್ದ ನಾಗೇಂದ್ರ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜನವರಿ 14ರಂದು ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಈ ಜಾಮೀನು ತನಿಖೆಗೆ ಅಡ್ಡಿಯಾಗಬಹುದು ಎಂಬ ಕಾರಣ ನೀಡಿರುವ ಸಿಬಿಐ, ಅದನ್ನು ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದೆ.
ಸಿಬಿಐ ಸಲ್ಲಿಸಿರುವ ಈ ಅರ್ಜಿಯು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಸಿಬಿಐ ಪರ ವಕೀಲರು ಜಾಮೀನು ರದ್ಧತಿಗೆ ಪ್ರಬಲ ಕಾರಣಗಳನ್ನು ಮಂಡಿಸುವ ಸಾಧ್ಯತೆಯಿದ್ದು, ಹೈಕೋರ್ಟ್ ತೆಗೆದುಕೊಳ್ಳುವ ನಿರ್ಧಾರವು ಮಾಜಿ ಸಚಿವರ ಭವಿಷ್ಯವನ್ನು ನಿರ್ಧರಿಸಲಿದೆ.


