ಬಾಗಲಕೋಟೆ ಉಪಚುನಾವಣೆ; ದಾಖಲೆಯಿಲ್ಲದ 32.50 ಲಕ್ಷ ರೂಪಾಯಿ ನಗದು ಜಪ್ತಿ!

ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ನಡುವೆಯೇ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 32.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಹೊನ್ನಾಕಟ್ಟಿ ಚೆಕ್‌ಪೋಸ್ಟ್‌ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಕ್ರಮ ಹಣ ಸಾಗಾಟಕ್ಕೆ ಬ್ರೇಕ್ ಹಾಕಲಾಗಿದೆ.
ಸ್ಥಿರ ಕಣ್ಗಾವಲು ತಂಡದ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ನಗದು ಪತ್ತೆಯಾಗಿದೆ. ಕೆಎ 36 ಪಿ 3991ನೋಂದಣಿ ಸಂಖ್ಯೆಯ ಮಾರುತಿ ಎರ್ಟಿಗಾ ಕಾರಿನಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ಕಾರನ್ನು ತಡೆದ ಅಧಿಕಾರಿಗಳು ಪರಿಶೀಲಿಸಿದಾಗ ದೊಡ್ಡ ಮೊತ್ತದ ಹಣ ಪತ್ತೆಯಾಗಿದ್ದು, ಅದಕ್ಕೆ ಸಂಬಂಧಿಸಿದ ಯಾವುದೇ ಪೂರಕ ದಾಖಲೆಗಳು ಲಭ್ಯವಿಲ್ಲದ ಕಾರಣ ಇಡೀ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಏಪ್ರಿಲ್ 9 ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಲಾಗಿದೆ. ಚುನಾವಣೆ ಘೋಷಣೆಯಾದಾಗಿನಿಂದಲೂ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದ್ದು, ಮತದಾರರ ಮೇಲೆ ಪ್ರಭಾವ ಬೀರಲು ಹಣ ಸಾಗಾಟ ಮಾಡುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.
ರಾಜಕೀಯವಾಗಿ ಈ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು, ಈಗಾಗಲೇ ಬಿಜೆಪಿ ವತಿಯಿಂದ ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಆದರೆ ಕಾಂಗ್ರೆಸ್ ಪಕ್ಷದಿಂದ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಇನ್ನು ನಿಗೂಢವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.
ಚುನಾವಣಾ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದು, ವಶಪಡಿಸಿಕೊಂಡ ಹಣದ ಮೂಲ ಮತ್ತು ಅದನ್ನು ಯಾರಿಗೆ ತಲುಪಿಸಲು ಕೊಂಡೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕರು ಸೂಕ್ತ ದಾಖಲೆಗಳಿಲ್ಲದೆ ಹೆಚ್ಚಿನ ನಗದು ಸಾಗಿಸದಂತೆ ಅಧಿಕಾರಿಗಳು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.




