ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ.

“ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಕ್ಷೇತ್ರದ ಜನತೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಸಂದೇಶವು ದೇಶದಾದ್ಯಂತ ಪ್ರತಿಧ್ವನಿಸುತ್ತಿದೆ.
ಚುನಾವಣೆ ವೇಳೆ ಇಲ್ಲಿ ನಾನೇ ಅಭ್ಯರ್ಥಿ ಎಂದಿದ್ದೆ. ಈಗಲೂ ನಾನೇ ಅಭ್ಯರ್ಥಿ. ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲಿಸುತ್ತೇನೆ. ಚುನಾವಣೆ ಸಮಯದಲ್ಲಿ ನಾನು ಕುಮಾರಸ್ವಾಮಿ ಅವರಿಗೆ ನೀವು ಶಾಸಕರಾಗಿ, ಮುಖ್ಯಮಂತ್ರಿಯಾಗಿ ಯಾವ ಸಾಧನೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದೆ. ಯೋಗೇಶ್ವರ್ ಅನೇಕ ದೇವಾಲಯ ಕಟ್ಟಿಸಿದ್ದಾರೆ, ನೀವು ಯಾವ ದೇವಾಲಯ ಕಟ್ಟಿದ್ದೀರಿ, ಶಾಲೆಗಾಗಿ ನೀವು 2 ಎಕರೆ ಜಮೀನು ದಾನ ಮಾಡಿದ್ದೀರಾ ಎಂದು ಸವಾಲು ಹಾಕಿದ್ದೆ. ನನ್ನ ಪ್ರಶ್ನೆಗೆ ಅವರಿಂದ ಉತ್ತರವೇ ಬರಲಿಲ್ಲ ಎಂದರು.


