ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ.
ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾ. ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವರು ವಾದ ಮಂಡಿಸಿದ್ದರು. ಒಂದುವೇಳೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ಮನ್ನಿಸಿದರೆ ಅವರಿಗೆ ಅದು ಅತೀ ದೊಡ್ಡ ಜಯವಾಗಲಿದೆ. ಆದರೆ, ಪ್ರಾಸಿಕ್ಯೂನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದರೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಲಿದೆ.
ಏನಿದು ವಿವಾದ?
ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿದ್ದು ಈಗ ವಿವಾದದ ಕೇಂದ್ರಬಿಂದು.