ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ.
ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ತಲೆದಂಡವಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಿದ್ದರು. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಜುಲೈ 12 ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.
ಸದ್ಯ ಪರಪ್ಪನ ಅಗ್ರಹಾರದಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಇಂದು ಸಂಜೆ ಕೋರ್ಟ್ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ನಾಳೆ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ವಾಲ್ಮೀಕಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು.
ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ಹೇಳಿತ್ತು.