ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೇ 28 ಕ್ಷೇತ್ರಗಳನ್ನೂ ಗೆಲ್ಲಲು ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ ದೋಸ್ತಿಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಮೂಡುತ್ತಿವೆ.
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಭೇಟಿ ಮಾಡಿದ್ರು. ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡಾ ಮಾತುಕತೆ ವೇಳೆ ಹಾಜರಿದ್ದರು. ಈ ಸಂದರ್ಭದಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಟ್ಟು ಕೊಡುವಂತೆ ದಳಪತಿಗಳು ಶಾ ಅವರಿಗೆ ಮನವಿ ಮಾಡಿದ್ದಾರೆ. ಕನಿಷ್ಠ 6 ಕ್ಷೇತ್ರಗಳನ್ನು ಜೆಡಿಎಸ್ಗೆ ಸಿಕ್ಕರೆ ಅನುಕೂಲವಾಗುತ್ತದೆ ಎಂದಿದ್ದಾರೆ ಎನ್ನಲಾಗಿದೆ. ಆದರೆ ಈ ಇದಕ್ಕೆ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿಲ್ಲ. 6 ಕ್ಷೇತ್ರಗಳನ್ನು ಕೇಳಿದ್ರೆ ಕೇವಲ 3 ಕ್ಷೇತ್ರಗಳನ್ನು ನೀಡಿದ್ದಾರಂತೆ. ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿದೆಯಂತೆ. ಹೀಗಾಗಿ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದ ಜೆಡಿಎಸ್ಗೆ ನಿರಾಸೆಯಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು, ಈ ಬಗ್ಗೆ ಜೆಡಿಎಸ್ ಮತ್ತೆ ಚೌಕಾಸಿಗೆ ಇಳಿಯುತ್ತಾ? ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಏನಾದ್ರೂ ಮಧ್ಯಪ್ರವೇಶ ಮಾಡ್ತಾರಾ ಎಂಬ ಕುತೂಹಲವೂ ಇದೆ.ಆದರೆ ಸದ್ಯದ ಮಾಹಿತಿ ಪ್ರಕಾರ ಜೆಡಿಎಸ್ ಮಂಡ್ಯ ವಿಚಾರದಲ್ಲಿ ಒಂದು ಹಂತಕ್ಕೆ ಜಯ ಗಳಿಸಿದಂತಾಗಿದೆ. ಕಳೆದ ಬಾರಿ ಸೋಲನುಭವಿಸಿದ್ದ ದಳಪತಿಗಳು ಇದೀಗ ಆ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಬಹಳ ಸ್ಪಷ್ಟವಾಗಿ ತಿಳಿಯುತ್ತಿದೆ. ಹೀಗಾಗಿ ಈ ಬಾರಿಯೂ ಇಂಡಿಯಾ ಎಲೆಕ್ಷನ್ ಅಂದ್ರೆ ಕರ್ನಾಟಕ ಮಂಡ್ಯ ಕ್ಷೇತ್ರವೇ ಜೋರಾಗಿ ಸದ್ದು ಮಾಡುತ್ತಾ ಎಂಬುದನ್ನು ಕಾದುನೋಡಬೇಕಿದೆ.


