ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಿಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.
ಸಿದ್ದರಾಮಯ್ಯನವರೇ ನೀವೇನು ಮಾಡಿದ್ದೀರಿ?
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು, ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್ ಅನ್ನು ನರೇಂದ್ರ ಮೋದಿಯವರು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.
ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ ಎಂದು ಕೇಳಿದರು. ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೇ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮತ್ತೆ ಅಧಿಕಾರ ಸಿಗುವುದು ಕಷ್ಟ ಎಂಬ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಒಡೆಯಲು ಮುಂದಾಗಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಕಟುವಾಗಿ ಟೀಕಿಸಿದರು.
ಲೋಕಸಭೆಯಲ್ಲಿ 20 ಸೀಟು ಗೆಲ್ಲುವ ಕನಸು ಕಾಣುತ್ತಿದೆ…!
ಲೋಕಸಭಾ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ಕನಸು ಕಾಣುತ್ತಿದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಈ ದೇಶದ ಪ್ರಜ್ಞಾವಂತ ಮತದಾರರು, ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ನಂಬುವುದಿಲ್ಲ. ಅದರ ಬದಲು ಮೋದಿ ಗ್ಯಾರಂಟಿಯನ್ನು ನಂಬುವುದು ರುಜುವಾತಾಗಿದೆ ಎಂದು ವಿಶ್ಲೇಷಿಸಿದರು.