ಮೈಸೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಕೈಗೊಂಡಿರುವ ಧರ್ಮಸ್ಥಳ ಚಲೋ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಧರ್ಮಸ್ಥಳಕ್ಕೆ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ. ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..
ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಈಗ ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ ಸಿಎಂ ಸಿದ್ದರಾಮಯ್ಯ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್‌ಐಟಿಯು ತನಿಖೆಯನ್ನು ಸ್ವತಂತ್ರವಾಗಿ ಮಾಡುತ್ತಿದ್ದು, ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದು ಹೇಳಿದ್ದಾರೆ.
ವಿರೋಧ ಪಕ್ಷದವರು ಟೀಕೆಯನ್ನು ಮಾಡಲಿ. ಆದರೆ ಎಲ್ಲಾ ವಿಷಯಗಳನ್ನೂ ರಾಜಕೀಯಗೊಳಿಸಲು ಹೋಗಬಾರದು ಎಂದಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ಈಗಿನ ಆರೋಪಗಳಲ್ಲಿ ಸತ್ಯವಿಲ್ಲ. ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದಾರೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ ಎಂದು ಹೇಳಿದರು.
ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ? ಎಂದು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ, ಒಂದು ಕಡೆ ವೀರೇಂದ್ರ ಹೆಗ್ಗಡೆಯವರ ಪರ ಎನ್ನುತ್ತಾರೆ, ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ. ನಿಜವಾಗಿಯೂ ಇವರು ಯಾರ ಪರ? ಎಂದು ಪ್ರಶ್ನಿಸಿದರು.