ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಮತ್ತೊಮ್ಮೆ ಮರುಜೀವ ಪಡೆದುಕೊಂಡಿದೆ.
ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.
ರಾಜ್ಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ.