ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ ಇದೆ ಎಂಬ ವರದಿಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಕೆನಡಾ ಸರ್ಕಾರ ಕೂಡ ವರದಿಯನ್ನು ನಿರಾಕರಿಸಿದೆ,
ಪ್ರಧಾನಿ ಮೋದಿ, ಸಚಿವ ಜೈಶಂಕರ್ ಅಥವಾ ಎನ್‌ಎಸ್‌ಎ ಅಜಿತ್ ದೋವಲ್ ಕೆನಡಾದೊಳಗೆ ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ ಎಂಬುದಕ್ಕೆ ಕೆನಡಾ ಸರ್ಕಾರದ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿಜ್ಜರ್ ಹತ್ಯೆಗೆ ಭಾರತದ ಉನ್ನತ ನಾಯಕರೇ ಸಂಚು ರೂಪಿಸಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇದೀಗ ಕೆನಡಾ ಸರ್ಕಾರದಿಂದ ಸ್ಪಷ್ಟನೆ ನೀಡಿದೆ.
ಭಾರತದ ವಿರುದ್ಧ ಆರೋಪ ಮಾಡಿ ಪ್ರಕಟವಾದ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಕೆನಡಾ, ಆ ವರದಿ ಊಹಾತ್ಮಕವಾಗಿದ್ದು, ನಿಖರವಾಗಿಲ್ಲ. ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದೆ.
ಪ್ರಕರಣದ ಹಿನ್ನೆಲೆ
ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಸಿಂಗ್ ಅವರಿಗೆ ತಿಳಿದಿತ್ತು. ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಸರ್ಕಾರದ ಮೂಲವನ್ನು ಉಲ್ಲೇಖಿಸಿ ಅಲ್ಲಿನ ಗ್ಲೋಬ್ ಆ್ಯಂಡ್ ಮೇಲ್ ಪತ್ರಿಕೆ ವರದಿ ಮಾಡಿತ್ತು. ಆದರೆ, ವರದಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದು ಕೆನಡಾದ ‘ಭಾರತದ ಮಾನಹಾನಿ ಮಾಡುವ ಅಭಿಯಾನ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟೀಕಿಸಿದ್ದರು.
ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಈ ಹಿಂದೆ ಭಾರತವನ್ನು ಟೀಕಿಸಿದ್ದರು. ಅದಕ್ಕೆ ಭಾರತವೂ ಸೂಕ್ತ ತಿರುಗೇಟು ನೀಡಿತ್ತು. ಈ ವಿದ್ಯಮಾನಗಳು ಉಭಯ ದೇಶಗಳ ನಡುವಣ ಹಳಸಿದ್ದ ಸಂಬಂಧವನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು.