ಜಿಲ್ಲೆಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮದುವೆಯಾದ 15 ದಿನಕ್ಕೆ ನವದಂಪತಿಗಳ ದಾರುಣ ಸಾವು

ಹಾವೇರಿ: ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ (30) ಮೃತಪಟ್ಟ ದುರ್ದೈವಿಗಳು.

ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ, ದಂಪತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿದ್ದ ಈ ಜೋಡಿ, ದೇವರ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ವಿಧಿಲೀಲೆ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇನ್ನುಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹರಸಾಹಸ ಪಟ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಭ್ರಮದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

Comments (0)

Your email address will not be published. Required fields are marked *

Back to top button