
ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಒಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ದಾಸರಕೊಪ್ಪಲು ನಿವಾಸಿಯಾಗಿದ್ದ 45 ವರ್ಷದ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗುಡ್ಡೇನಹಳ್ಳಿಯ ಎರಡು ಹಾಸ್ಟೆಲ್‌ಗಳಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ಅವರಿಗೆ ಇತ್ತೀಚೆಗಷ್ಟೇ ಮ್ಯಾನೇಜರ್ ಆಗಿ ಬಡ್ತಿ ದೊರೆತಿತ್ತು.
ಪ್ರಸ್ತುತ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಮ್ಯಾನೇಜರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಲೋಕೇಶ್, ಶನಿವಾರ ರಾತ್ರಿ ತಮ್ಮ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಡ್ತಿ ಪಡೆದು ಹೊಸ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಅನಿರೀಕ್ಷಿತ ಸಾವಿನ ಕುರಿತು ಹಾಸನದ ಪೆನ್‍ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಸಾವಿನ ಹಿಂದಿನ ರಹಸ್ಯವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.




