ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು.
ಇಂದು ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಲಾಗಿದ್ದ, “ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗುಂಪು-ಎ ಮತ್ತು ಗುಂಪು-ಬಿ ಮತ್ತು ಇತರೆ ವೃಂದದ ಹುದ್ದೆಗಳಿಗೆ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಅವಕಾಶ ಪತ್ರ ವಿತರಣಾ ಸಮಾರಂಭ” ದಲ್ಲಿ ಅವರು ಮಾತನಾಡಿದರು.
ಸರ್ಕಾರವು ಸಾಧಕ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 2% ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ. ಪದವಿ ಪೂರ್ಣಗೊಳಿಸಿದ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ‘ಎ’ ಮತ್ತು ‘ಬಿ’ ಹಾಗೂ ಪದವಿ ಪೂರ್ವ ಶಿಕ್ಷಣ ಪೂರ್ಣಗೊಳಿಸಿದ ಸಾಧಕ ಕ್ರೀಡಾಪಟುಗಳಿಗೆ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಹರು ಎಂದು ಹೇಳಿದರು.
ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆಯಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಇದೇ ಮೊದಲ ಬಾರಿಗೆ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಸಾಧಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಅವಕಾಶ ಪತ್ರ ವನ್ನು ವಿತರಿಸಿದರು. ಈ ಸಮಾರಂಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.