
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಬ್ರೆಜಿಲ್‌ನಿಂದ ಬಂದಿದ್ದ ಪ್ರಯಾಣಿಕನೊಬ್ಬನನ್ನು ತಪಾಸಣೆಗೆ ಒಳಪಡಿಸಿದಾಗ ಈ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.
ಪರಿಶೀಲನೆಯ ವೇಳೆ ಪ್ರಯಾಣಿಕನ ಬಳಿ ಸುಮಾರು 4.776 ಕೆಜಿ ತೂಕದ ಕೊಕೇನ್ ಪತ್ತೆಯಾಗಿದ್ದು, ಇದರ ಅಂತರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 23.88 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಸದ್ಯ ಎನ್‌ಸಿಬಿ ಅಧಿಕಾರಿಗಳು ಸದರಿ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬೃಹತ್ ಪ್ರಮಾಣದ ಡ್ರಗ್ಸ್ ಜಾಲದ ಹಿಂದೆ ಯಾರಿದ್ದಾರೆ ಮತ್ತು ಇದನ್ನು ಬೆಂಗಳೂರಿನಲ್ಲಿ ಯಾರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂಬ ಬಗ್ಗೆ ತನಿಖೆ ಚುರುಕುಗೊಂಡಿದೆ.




