ಬೆಂಗಳೂರು: ಕೆ. ಆರ್ ನಗರ ಮೂಲದ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಎರಡು ಸೆಕ್ಷನ್ ಅಡಿಯಲ್ಲಿ 10 ಲಕ್ಷ ರೂ ದಂಡ ವಿಧಿಸ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 376(2)(k) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.