ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ. ಸಿ.ಟಿ.ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ. ಒಬ್ಬ ಪೊಲೀಸ್ ಅಧಿಕಾರಿ ಸುರಕ್ಷತೆ ದೃಷ್ಟಿಯಿಂದ ಅವರನ್ನು ಗದ್ದೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ. ಅಂದರೆ ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದರ್ಥ. ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದು ಈ ಸರ್ಕಾರ ಜನರಿಗೆ ತಿಳಿಸಿದೆ ಎಂದರು.
ಸಿ.ಟಿ.ರವಿ ಅವರಿಗೆ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಅದಕ್ಕಾಗಿ ರಾಜ್ಯಪಾಲರು ಸಂವಿಧಾನವನ್ನು ರಕ್ಷಣೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.


