ನವದೆಹಲಿ : ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿಯ ಒಟ್ಟು 70 ಸ್ಥಾನಗಳ ಪೈಕಿ 29 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ.
ಬಿಜೆಪಿಯ ಮಾಜಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮುಖ್ಯಮಂತ್ರಿ ಮತ್ತು ಎಎಪಿ ಅಭ್ಯರ್ಥಿ ಅತಿಶಿ ಸ್ಪರ್ಧಿಸಲಿರುವ ಕಲ್ಕಾಜಿಯಿಂದ ಮತ್ತೊಬ್ಬ ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಲ್ಕಾ ಲಂಬಾ ಅವರನ್ನು ಸ್ಪರ್ಧೆಗೆ ಇಳಿಸಿದ್ದು, ಈ ಬಾರಿ ತ್ರಿಕೋನ ಹೋರಾಟ ಕಂಡುಬರಲಿದೆ.
ಇತ್ತೀಚೆಗೆ ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಯಾದ ಕೈಲಾಶ್ ಗಹ್ಲೋಟ್ ಅವರು ಬ್ರಿಜ್ವಾಸನ್‌ನಿಂದ ಸ್ಪರ್ಧಿಸಲಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ನಿಂದ ಬಿಜೆಪಿಗೆ ವಾಪಸಾದ ಅರವಿಂದರ್ ಸಿಂಗ್ ಲವ್ಲಿ ಗಾಂಧಿ ನಗರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.