ಜಿಲ್ಲೆಸುದ್ದಿ

ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ!

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಪಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಕ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನದ ಅತ್ಯಂತ ಪವಿತ್ರವಾದ ಆವರಣದೊಳಗೆ ಮಾಂಸಾಹಾರ ಸೇವನೆ ಮಾಡಲಾಗಿದೆ ಎಂಬ ದೂರು ಕೇಳಿಬಂದಿದ್ದು, ಈ ಕೃತ್ಯವು ದಾಸೋಹ ಭವನದ ಪ್ರವೇಶ ದ್ವಾರದ ಬಳಿಯೇ ನಡೆದಿದೆ ಎಂದು ವರದಿಯಾಗಿದೆ. ಪವಿತ್ರ ಯಾತ್ರಾಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಮತ್ತು ಭಕ್ತಾದಿಗಳಲ್ಲಿ ಭಾರಿ ಆತಂಕ ಮೂಡಿಸಿದೆ.

ಈ ಕೃತ್ಯ ಎಸಗಿದವರು ಸ್ಥಳೀಯ ಹೂವಿನ ವ್ಯಾಪಾರಿಯಾದ ಪ್ರದೀಪ್ ಎಂಬ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾಸೋಹ ಭವನದ ಬಳಿ ಕುಳಿತು ಆತ ಮಾಂಸಾಹಾರ ಸೇವಿಸುತ್ತಿರುವುದನ್ನು ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಪತ್ತೆಹಚ್ಚಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಆತನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಈ ವರ್ತನೆಯನ್ನು ಕಂಡು ಅಲ್ಲಿ ನೆರೆದಿದ್ದ ಭಕ್ತರು ವ್ಯಾಪಾರಿಯ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಘಟನೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಿಯಮಗಳನ್ನು ಉಲ್ಲಂಘಿಸಿ ಪವಿತ್ರ ಕ್ಷೇತ್ರದಲ್ಲಿ ಮಾಂಸಾಹಾರ ಸೇವಿಸಿದ ವ್ಯಾಪಾರಿಗೆ ಭದ್ರತಾ ಸಿಬ್ಬಂದಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರ್ಮಿಕ ಕೇಂದ್ರಗಳ ನಿಯಮಾವಳಿಗಳನ್ನು ಗಾಳಿಗೆ ತೂರುವ ಇಂತಹ ವ್ಯಕ್ತಿಗಳ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Comments (0)

Your email address will not be published. Required fields are marked *

Back to top button