ಗದಗ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೈಕ್ಷಣಿಕ ಏಳಿಗೆಗೆ ಪಣತೊಟ್ಟಿದ್ದು, ಗುಣಮಟ್ಟದ ಶಿಕ್ಷಣ ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಕರ್ನಾಟಕ ಮೌಲಾನಾ ಅಜಾದ್ ಪಬ್ಲಿಕ್ ಶಾಲೆಯ ಕಟ್ಟಡವನ್ನು ಉದ್ಘಾಟಿಸಿ ಹಾಗೂ ಗಂಗಿಮಡಿಯಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರ ಬರೋಬ್ಬರಿ ₹4,500 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ವಿಶೇಷವೆಂದರೆ, ಈ ಅನುದಾನದ ಬಹುಪಾಲು ಹಣವನ್ನು ಮಕ್ಕಳ ಶಿಕ್ಷಣ ಮತ್ತು ಶೈಕ್ಷಣಿಕ ಮೂಲಸೌಕರ್ಯಗಳಿಗಾಗಿಯೇ ಬಳಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರದೃಷ್ಟಿಯ ಫಲವಾಗಿ, ರಾಜ್ಯಾದ್ಯಂತ ಈಗಾಗಲೇ 2.38 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಿಎಂ ಅವರ ಮೊದಲ ಅವಧಿಯಲ್ಲಿ ಸ್ಥಾಪಿಸಲಾದ ಶಾಲೆಗಳ ಯಶಸ್ಸಿನ ಹಿನ್ನೆಲೆಯಲ್ಲಿ, ಪ್ರಸ್ತುತ ಹೆಚ್ಚುವರಿಯಾಗಿ 100 ಹೊಸ ವಸತಿ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಮದರಸಾ ಶಿಕ್ಷಣದ ಗುಣಮಟ್ಟ ಹೆಚ್ಚಳ: ಕೇವಲ ಶಾಲೆಗಳಲ್ಲದೆ, ಮದರಸಾಗಳಲ್ಲಿ ಕಲಿಯುವ ಮಕ್ಕಳ ಭವಿಷ್ಯದ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಿದೆ. ಪ್ರಸ್ತುತ 100 ಮದರಸಾಗಳಲ್ಲಿ 9 ಮತ್ತು 10ನೇ ತರಗತಿಯ ಸುಮಾರು 5,000 ಮಕ್ಕಳು ಉತ್ತೀರ್ಣರಾಗುತ್ತಿದ್ದಾರೆ. ಮದರಸಾ ವಿದ್ಯಾರ್ಥಿಗಳಿಗೂ ಮುಖ್ಯವಾಹಿನಿಯ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ. ಪಾಟೀಲ್ ಅವರ ಸಹಕಾರವನ್ನು ಸ್ಮರಿಸಿದ ಜಮೀರ್ ಅಹ್ಮದ್, ಸಣ್ಣ ಅನುದಾನವಿದ್ದರೂ ಇಷ್ಟು ಅಚ್ಚುಕಟ್ಟಾದ ಮತ್ತು ವಿಶಾಲವಾದ ಕಟ್ಟಡ ನಿರ್ಮಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.


