ರಾಜಕೀಯ

ಕಾವೇರಿದ ಆನೆ ಪಾಲಿಟಿಕ್ಸ್ – ಶಾಸಕಿ ನಯನಾ ಮೋಟಮ್ಮ ರಾಜೀನಾಮೆ!

'Elephant Politics' Heats Up – MLA Nayana Motamma Resigns!

ಬೆಂಗಳೂರು : ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವೆ ನಡೆಯುತ್ತಿದ್ದ ‘ಆನೆ ಸ್ಥಳಾಂತರ’ ರಾಜಕೀಯ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಹಾಸನ ಭಾಗದ ಕಾಡಾನೆಗಳನ್ನು ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸಭೆ ಸಭಾಧ್ಯಕ್ಷರ ಕಾರ್ಯದರ್ಶಿಗಳನ್ನು ಭೇಟಿಯಾದ ನಯನಾ ಮೋಟಮ್ಮ, ತಮ್ಮ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಶಾಸಕಿಯೊಬ್ಬರು ಸಿಡಿದೆದ್ದು ರಾಜೀನಾಮೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಘಟನೆಯ ಹಿನ್ನೆಲೆ ಏನು?

ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಲ್ಲಿನ ಆನೆಗಳನ್ನು ಹಿಡಿದು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿತ್ತು. ಹಾಸನ ಜಿಲ್ಲೆಯ ಶಾಸಕರು ಈ ಸ್ಥಳಾಂತರಕ್ಕೆ ಒತ್ತಡ ಹೇರಿದ್ದರು.

ಆದರೆ, ಈ ನಿರ್ಧಾರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. “ಈಗಾಗಲೇ ಕಾಫಿನಾಡಿನಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಸನದ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ತಂದು ಬಿಟ್ಟರೆ ಚಿಕ್ಕಮಗಳೂರಿನ ರೈತರು ಮತ್ತು ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗಲಿದೆ” ಎಂದು ಕಾಫಿನಾಡಿನ ಶಾಸಕರು ಹಾಸನದ ಶಾಸಕರ ವಿರುದ್ಧ ಕೆರಳಿದ್ದರು.

ನಯನಾ ಮೋಟಮ್ಮ ಆಕ್ರೋಶ: ಮೂಡಿಗೆರೆ ಕ್ಷೇತ್ರದಲ್ಲಿ ಈಗಾಗಲೇ ಕಾಡಾನೆ ದಾಳಿಗೆ ಹಲವರು ಬಲಿಯಾಗಿದ್ದು, ಬೆಳೆ ಹಾನಿಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಹೀಗಿರುವಾಗ ಸರ್ಕಾರ ಹಾಗೂ ಅರಣ್ಯ ಇಲಾಖೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರ ಅಭಿಪ್ರಾಯವನ್ನೂ ಪಡೆಯದೆ ಏಕಪಕ್ಷೀಯವಾಗಿ ಆನೆ ಸ್ಥಳಾಂತರಕ್ಕೆ ಮುಂದಾಗಿರುವುದು ನಯನಾ ಮೋಟಮ್ಮ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು.

“ನನ್ನ ಕ್ಷೇತ್ರದ ಜನರ ಹಿತಾಸಕ್ತಿಗಿಂತ ನನಗೆ ಅಧಿಕಾರ ದೊಡ್ಡದಲ್ಲ. ನಮ್ಮ ಜಿಲ್ಲೆಯ ಜನರನ್ನು ಸಂಕಷ್ಟಕ್ಕೆ ದೂಡುವ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಅಸಮಾಧಾನ ಹೊರಹಾಕಿರುವ ನಯನಾ ಮೋಟಮ್ಮ, ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights