ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ..
ಆನೆಗಳ ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿದ್ದು, ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಐದು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮತ್ತು ಯಾವುದೇ ಲೋಪಗಳು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ಸಚಿವರು ಮುಖ್ಯ ವನ್ಯಜೀವಿ ವಾರ್ಡನ್‌ಗೆ ನಿರ್ದೇಶಿಸಿದ್ದಾರೆ.
ಇನ್ನು ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಂಡ್ರೆ ಎಚ್ಚರಿಸಿದ್ದು, ವಿದ್ಯುತ್ ಸಂಪರ್ಕ ನೀಡಿದ್ದರಿಂದಾಗಿಯೇ ಆನೆಗಳ ಸಾವು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


