ರಾಜ್ಯಸುದ್ದಿ

ಶಿರಸಿ ಬಳಿ ಭೀಕರ ಬಸ್ ಅಪಘಾತ: ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳದಿಂದ ಬಾಗಲಕೋಟೆ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್​ಟಿಸಿ (KSRTC) ಬಸ್ ಮತ್ತು ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಈ ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಶಿರಸಿ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಚಾಲಕರ ಅಜಾಗರೂಕತೆ ಅಥವಾ ತಾಂತ್ರಿಕ ದೋಷ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

Comments (0)

Your email address will not be published. Required fields are marked *

Back to top button