ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಎಸ್ ನಾರಾಯಣ್, ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಸ್.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪ ಪ್ರಕರಣದಲ್ಲಿ ಪವನ್ ಮೊದಲ ಆರೋಪಿ ಆಗಿದ್ದಾರೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.