ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪುನರ್ ಆಯ್ಕೆ ಆಗಿದ್ದಾರೆ.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಂದುವರೆಸಲು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ತೀರ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಲ್ಪಿ ನಾಯಕ ಸುರೇಶ್ ಬಾಬು, ಸೇರಿದಂತೆ ಮಹಾರಾಷ್ಟ್ರ, ಕೇರಳ, ಬಿಹಾರ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳದ ರಾಜ್ಯಾದ್ಯಕ್ಷರು ಕಾರ್ಯದರ್ಶಿಗಳು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಈ ರಾಜ್ಯದಲ್ಲಿ ತಲೆ ಎತ್ತಿ ನಿಲ್ಲಬೇಕು. ನಾವು ಎನ್‌ಡಿಎ ಮೈತ್ರಿಕೂಟದಲ್ಲಿ ಇದ್ದೇವೆ. ಇದರಲ್ಲಿ ಏನೂ ಮುಚ್ಚುಮರೆಯಿಲ್ಲ. ಕುಮಾರಸ್ವಾಮಿ ಅವರು ಈಗ ಕೇಂದ್ರ ಮಂತ್ರಿಯಾಗಿದ್ದಾರೆ. ಈ ಪಕ್ಷದ ನಾಯಕತ್ವ ವಹಿಸಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಅನುಭವ ಪಡೆದಿದ್ದಾರೆ. ಈ ರಾಜ್ಯದ ಮೂಲೆ ಮೂಲೆ ಬಗ್ಗೆ ತಿಳಿದುಕೊಂಡಿದ್ದಾರೆ.

ಜನರ ಸಮಸ್ಯೆಗಳ ಬಗ್ಗೆ ಗೊತ್ತಿದೆ. ಹೀಗಾಗಿ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಜೆಡಿಎಸ್ ಈ ರಾಷ್ಟ್ರದಲ್ಲಿ ತಲೆ ಎತ್ತಿ ನಿಲ್ಲಬೇಕು ಎಂಬುದು ನನ್ನ ಆಕಾಂಕ್ಷೆ ಮತ್ತು ಅಭಿಲಾಷೆ ಎಂದು ದೇವೇಗೌಡರು ತಮ್ಮ ಮನದ ಇಂಗಿತ ವ್ಯಕ್ತಪಡಿಸಿದರು. ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ತೆಗೆದಿದ್ದು ಸಿದ್ದರಾಮಯ್ಯ ಅಂತ ಹೆಸರು ಹೇಳದೇ ವಾಗ್ದಾಳಿ ನಡೆಸಿದ ದೇವೇಗೌಡರು, ತಮ್ಮ ಆರೋಗ್ಯದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೂ ಉತ್ತರ ಕೊಟ್ಟರು. ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಪಕ್ಷ ರಾಜ್ಯ ಮತ್ತು ದೇಶದಲ್ಲಿ ತಲೆ ಎತ್ತಿ ನಿಲ್ಲಬೇಕು ಎಂದು ದೇವೇಗೌಡರು ಕರೆ ಕೊಟ್ಟರು.



