ಕೊಡಗು : ಈ ದಿನ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಮತ್ತು ರೋಟರಿ ಜಿಲ್ಲೆ 3181 ರವರ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಮಡಿಕೇರಿ ನಗರದ ರಾಜಾಸೀಟ್ ಮುಂಭಾಗದಲ್ಲಿ ಮತದಾನ ಜಾಗೃತಿ ಕುರಿತಾದ ಬೀದಿ ನಾಟಕ ಮತ್ತು ಕಾರು ರ್ಯಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಸರ್ ರವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತದಾನ ಜಾಗೃತಿ ಕುರಿತಾಗಿ ಸಾರ್ವಜನಿಕರು ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950, ಮತ್ತು ಸಿ. ವಿಜಿಲ್ ಆ್ಯಪ್ ಬಳಕೆ ಕುರಿತಾಗಿ ಮಾಹಿತಿ ನೀಡಿದರು. ಅಲ್ಲದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಕರೆ ನೀಡಿದರು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಸಂವಿಧಾನದ ಕರ್ತವ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಉಪ ವಿಭಾಗಾಧಿಕಾರಿಗಳಾದ ವಿನಾಯಕ್ ನರ್ವಾಡೆ, ರವರು ಮತದಾನ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರೀಕನ ಆದ್ಯ ಕರ್ತವ್ಯ ಎಂದು ತಿಳಿಸುತ್ತಾ , ತಮ್ಮ ಮುಂದಿನ ಭವಿಷ್ಯಕ್ಕಾಗಿ ತಪ್ಪದೇ ಮತ ಚಲಾಯಿಸುವಂತೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಮೌನೇಶ್ ವಿಶ್ವಕರ್ಮ ತಂಡದವರು ಮತದಾನದ ಮಹತ್ವ ಕುರಿತು ಪ್ರಸ್ತುತಪಡಿಸಿದ ಅರ್ಥಪೂರ್ಣವಾದ ಬೀದಿ ನಾಟಕವು ಸರ್ವರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಅನಂತಶಯನ, ಮಾತಂಡ ಸುರೇಶ್, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯಿತಿ ಮಡಿಕೇರಿ ರವರು, ಪೌರಾಯುಕ್ತರು , ನಗರಸಭೆ ಮಡಿಕೇರಿ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಇತರರು ಇದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಆಯೋಜಕರಾದ ರೋಟರಿ ಜಿಲ್ಲೆ 3181 ರ ಮುಖ್ಯಸ್ಥರಾದ ಶ್ರೀ ವಿಶ್ವನಾಥ ಶಣೈ ಇದ್ದರು.