ಬೆಳಗಾವಿ: ಲೋಕಸಭಾ ಮಹಾಸಮರದ ಎರಡು ದಿನಗಳ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದಾರೆ. ನೆನ್ನೆ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಮೋದಿ ಅವರು ಖಾಸಗಿ ಹೋಟೆಲ್‌ನತ್ತ ಪ್ರಯಾಣ ಬೆಳೆಸಿದರು. ಮೋದಿ ಆಗಮನದ ಹಿನ್ನೆಲೆ ಬೆಳಗಾವಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಪ್ರಥಮವಾಗಿ ಬೆಳಗಾವಿಯಲ್ಲಿ ವಾಸ್ತವ ಹೂಡಲಿರುವ ಪ್ರಧಾನಿ ಮೋದಿ ರಾಜ್ಯದ 11 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಲಿದ್ದಾರೆ.