Wednesday, April 30, 2025
32 C
Bengaluru
LIVE
ಮನೆಸುದ್ದಿಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ತೆಂಕುತಿಟ್ಟಿನಲ್ಲೂ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಸುಕಿನ ಜಾವ ಇಹಲೋಕ ತ್ಯಜಿಸಿದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

45 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು ಪೆರ್ಡೂರು, ಅಮೃತೇಶ್ವರಿ ಮೇಳ, ಹಿರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ತಿರುಗಾಟ ನಡೆಸಿದ್ದರು. ಬಡಗು ತಿಟ್ಟಿನ ಜನಪ್ರಿಯ ಮೇಳವಾಗಿರುವ ಪೆರ್ಡೂರು ಮೇಳವೊಂದರಲ್ಲೇ 28 ವರ್ಷಗಳ ಕಾಲ ತಿರುಗಾಟ ನಡೆಸಿದ್ದರು.

1957ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಸುಬ್ರಹ್ಮಣ್ಯ ಧಾರೇಶ್ವರ ಅವರು ಚಿಕ್ಕವರಿದ್ದಾಗಲೇ ಸಂಗೀತ ಕಲಿತು ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಇದೇ ವೇಳೆ ಎಲೆಕ್ಟ್ರಿಕ್ ಅಂಗಡಿ ಪ್ರಾರಂಭಿಸಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆ ಮಾಡುಕೊಟ್ಟಿದ್ದರು. ಇವರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ನಾರಣಪ್ಪ ಉಪ್ಪೂರರು ಕಂಡು ರಂಗಸ್ಥಳಕ್ಕೆ ಕರೆತಂದರು.

ಅಲ್ಲಿಂದ ತಿರುಗಿ ನೋಡದ ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಸಮಯದಲ್ಲೇ ಜನಪ್ರಿಯರದರು. ಪೌರಾಣಿಕ ಮಾತ್ರವಲ್ಲದೆ ಸಾಮಾಜಿಕ ಕಥಾಹಂದರವುಳ್ಳ ಪ್ರಸಂಗಳಲ್ಲಿ ಹೊಸತನದ ಪ್ರಯೋಗ ಮಾಡಿ ಯಶಸ್ವಿಯಾದರು. ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಅಪ್ರತಿಮ ಭಾಗವತ ಕಾಳಿಂಗ ನಾವುಡರ ಅಗಲುವಿಕೆಯಿಂದ ಉಂಟಾಗಿದ್ದ ನಿರ್ವಾತವನ್ನು ತುಂಬುವಲ್ಲಿ ಸುಬ್ರಹ್ಮಣ್ಯ ಯಶಸ್ವಿಯಾಗಿದ್ದರು. ಅಚ್ಚರಿಯೆಂಬಂತೆ ಕೀರ್ತಿಯ ಉತ್ತುಂಗದಲ್ಲಿರುವಾಗಲೇ ಅವರು ನಿವೃತ್ತರಾಗಿದ್ದರು.

ಹಿರಿಯ ಕಲಾವಿದರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments