ಬೆಂಗಳೂರು: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ, ಬೆಂಗಳೂರಿನಲ್ಲಿ ಯುವತಿ ಮೇಲೆ ಆಗಿರುವ ಘಟನೆ ನಡೆದಿದೆ.
ನಗರದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆಟೋದಲ್ಲಿ ಕರೆತಂದು ಅತ್ಯಾಚಾರ ಎಸಗಿರಬಹುದು ಎನ್ನಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಇದೇ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಗೋದಾಮು ಬಳಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರಿಂದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಯುವತಿ ಎಲ್ಲಿಂದ ಬರ್ತಾ ಇದ್ರು ಎಂದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


