ಫುಟ್‌ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ – ಆರೋಪಿಗಳ ಮೇಲೆ FIR!
GBA officials assaulted during footpath clearance – FIR against the accused!

ಬೆಂಗಳೂರು : ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ ಬಳಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುತ್ತಿದ್ದ GBA ಸಿಬ್ಬಂದಿಗಳ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಮಹಿಳೆ ಸೇರಿದಂತೆ ಮೂವರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ತನಿಖೆ ಚುರುಕುಗೊಳಿಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಮೇಲೆ FIR ದಾಖಲಾಗಿದೆ.
ಈ ಘಟನೆಯ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ಬಡ ವ್ಯಾಪಾರಿಗಳಲ್ಲ, ಇವರು ಸಮಾಜಘಾತುಕ ಶಕ್ತಿಗಳು. ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಯಾರನ್ನೂ ಬಿಡುವುದಿಲ್ಲ. ಎಲ್ಲರನ್ನೂ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.
ಹಲ್ಲೆಯಿಂದ ಅಧಿಕಾರಿಗಳು ಹಿಂಜರಿಯುವ ಬದಲು ಮತ್ತಷ್ಟು ಹಠಕ್ಕೆ ಬಿದ್ದಿದ್ದಾರೆ. ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಜೆಸಿಬಿ ತರಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅರ್ಧಕ್ಕೆ ನಿಂತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಅಧಿಕಾರಿಗಳು ಯಶಸ್ವಿಯಾಗಿ ಮುಂದುವರಿಸಿದ್ದಾರೆ.




