
ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ವೇಗವಾಗಿ ಅಡ್ಡಬಂದ ಕಾರನ್ನು ತಪ್ಪಿಸಲು ಪ್ರಯತ್ನಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ 11 ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಘಾತವು ಸರಿಯಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲೇ ನಡೆದಿದೆ. ಕಾರು ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯವೇ ಈ ಅವಘಡಕ್ಕೆ ನೇರ ಕಾರಣ ಎಂದು ಹೇಳಲಾಗುತ್ತಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಜಜ್ಜಲ್ಪಟ್ಟಿದ್ದು, ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.




