ನವದೆಹಲಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು. ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ ಕೋರ್​ ಕಮಿಟಿ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಈ ಹಿಂದೆ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯು ಬಿಜೆಪಿ ಬಗ್ಗೆ ಕುಮಾರಸ್ವಾಮಿ ತುಸು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ 2 ಸೀಟಿಗಾಗಿ ಇಷ್ಟೆಲ್ಲ ಒದ್ದಾಡಬೇಕಾ ಎಂದಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ಕೇಂದ್ರ ಸಚಿವರಾಗಿದ್ದುಕೊಂಡು ಮೈತ್ರಿ ಪಕ್ಷದ ಬಗ್ಗೆ ಅಸಮಾಧಾನದ ಹೇಳಿಕೆ ನೀಡಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights