ಚಂಡೀಗಢ: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ.

ದೃಷ್ಟಿ ವರ್ಮಾ (20) ಮೃತ ಮಹಿಳೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ  ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಇದೀಗ ಮತ್ತೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆ ಸಂಬಂಧ ಕಟ್ಟಡದ ಮಾಲೀಕರಾದ ಪರ್ವಿಂದರ್ ಸಿಂಗ್‌ ಮತ್ತು ಗಗನ್‌ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊಹಾಲಿ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಕಟ್ಟಡದ ಕುಸಿತದ ಹಿಂದಿನ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಹಿಬ್ಜಾದಾ ಅಜಿತ್ ಸಿಂಗ್ ನಗರದಲ್ಲಿ ಬಹುಮಹಡಿ ಕಟ್ಟಡ ಕುಸಿತದ ಸುದ್ದಿ ಅತೀವ್ರ ನೋವು ತಂದಿದ್ದು, ಸಂಪೂರ್ಣ ಆಡಳಿತ ಮತ್ತು ಇತರ ರಕ್ಷಣಾ ಕಾರ್ಯಾಚರಣೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Verified by MonsterInsights