ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.
59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವರು.21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು,5861 ವಿದ್ಯಾರ್ಥಿಗಳ ಪ್ರಥಮ ದರ್ಜೆ,1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ.ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದು,79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ.140 ವಿದ್ಯಾರ್ಥಿಗಳು ಪಿ.ಹೆಚ್.ಡಿ ಪದವಿ ಸ್ವೀಕರಿಸಿದರು.
59ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದು ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಅನ್ನಪೂರ್ಣ .ಎಸ್ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಗಣ್ಯರಿಗೂ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು.ಗೌರವ ಡಾಕ್ಟರೇಟ್ ಸ್ವೀಕರಿಸುವ ಸಂದರ್ಭದಲ್ಲಿ ಗುರುಕಿರಣ್ ಕುಟುಂಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವಕ್ಕೆ ಗೌರವಾನ್ವಿತ ರಾಜ್ಯಪಾಲರು ಥಾವರ್‌ಚಂದ್ ಗೆಹ್ಲೋಟ್ ಅನಿವಾರ್ಯ ಕಾರಣಗಳಿಂದ ಗೈರಾಗಿದ್ದು ಘಟಿಕೋತ್ಸವದ ಅಧ್ಯಕ್ಷತೆಯನ್ನು ಮಾನ್ಯ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ವಹಿಸಿದ್ದರು.ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷರಾದ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವದ ಭಾಷಣ ಮಾಡಿದರು.ಕುಲಪತಿ ಡಾ.ಜಯಕರ ಎಸ್ ಎಂ,ಕುಲಸಚಿವ ಶೇಕ್ ಲತೀಫ್ ಕೆ.ಎ.ಎಸ್,ಕುಲಸಚಿವ (ಮೌಲ್ಯಮಾಪನ) ಶ್ರೀನಿವಾಸ್ ಸಿ ಸೇರಿದಂತೆ ಸಿಂಡಿಕೇಟ್ ಸದಸ್ಯರು, ಡೀನರ್ ಉಪಸ್ಥಿತರಿದ್ದರು.