ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು ಅನಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇವಲ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತಿದ್ದಾರೆ ಎಂದು ಆರೋಪಿಸಿದರು. ಈ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿರುವ ಭರವಸೆ ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ, ಅದರಿಂದ ಏನು ಸುಧಾರಣೆ ಆಗಿಲ್ಲ ಎಂದು ಗೊತ್ತಾಗುತ್ತದೆ. ಪ್ರತಿ ವರ್ಷ ಬಂಡವಾಳ ವೆಚ್ಚ ಹೆಚ್ಚಾಗುತ್ತ ಹೋಗಬೇಕು. ಆದರೆ, ಈ ವರ್ಷ ಕಡಿಮೆಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತೆಗೆದುಕೊಂಡು ಹೋಗಿದ್ದಾರೆ. ಎಷ್ಟೇ ಗ್ಯಾರೆಂಟಿ ಯೋಜನೆ ಘೋಷಣೆ ಮಾಡಲಿ ಅದಕ್ಕೆ ತಕ್ಕಂತೆ ಆದಾಯ ಸಂಗ್ರಹ ಮಾಡಬೇಕು. ಗ್ಯಾರೆಂಟಿ ಹೆಸರಲ್ಲಿ ಜನರ ಮೇಲೆ ಹೊರೆ ಹಾಕಿರುವುದನ್ನು ಕಡಿಮೆ ಮಾಡಿ, ಅಭಿವೃದ್ದಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡಿ ಎಂದು ಸಲಹೆ ನೀಡಿದ್ದಾರೆ.