ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ.
ಮೊದಲ ಪ್ರಕರಣದಲ್ಲಿ ಮಲೇಷ್ಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಗಾಂಜಾ ಪತ್ತೆಯಾಗಿದೆ. ಆತನ ಬಳಿಯಿದ್ದ ಸುಮಾರು 5.48 ಕೆಜಿ ತೂಕದ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇದರ ಅಂತರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಅಂದಾಜು ಒಂದು ಕೋಟಿ 91 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಇನ್ನೊಂದು ಪ್ರಕರಣದಲ್ಲಿ ಥೈಲ್ಯಾಂಡ್ನ ಫುಕೆಟ್ನಿಂದ ಬಂದ ಇಬ್ಬರು ಪ್ರಯಾಣಿಕರ ಮೇಲೆ ಅನುಮಾನಗೊಂಡು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರ ಬಳಿ ಒಂದು ಕೋಟಿ ಆರು ಲಕ್ಷ ರೂಪಾಯಿ ಮೌಲ್ಯದ 3.03 ಕೆಜಿ ಹೈಡ್ರೋಪೋನಿಕ್ ಗಾಂಜಾ ಇರುವುದು ದೃಢಪಟ್ಟಿದೆ. ಸದ್ಯ ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


