Top Newsದೇಶ/ವಿದೇಶಸುದ್ದಿ

ಇರಾನ್-ಇಸ್ರೇಲ್ ಮಹಾಸಮರ; ಮೌನ ಮುರಿದ ಮೋದಿ!

ಮಧ್ಯಪ್ರಾಚ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಸಂಘರ್ಷದ ಕುರಿತು ಮೌನ ಮುರಿದಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಯುಕೆ ಪ್ರಧಾನಿ ಮಾರ್ಕ್ ಕಾರ್ನಿ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, “ಭಾರತವು ಯಾವಾಗಲೂ ಶಾಂತಿ ಮತ್ತು ಸ್ಥಿರತೆಯ ಪರವಾಗಿ ನಿಲ್ಲುತ್ತದೆ” ಎಂದು ಜಾಗತಿಕ ಸಮುದಾಯಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲ, ಬದಲಾಗಿ ರಾಜತಾಂತ್ರಿಕ ಮಾರ್ಗ ಮತ್ತು ಮಾತುಕತೆಯ ಮೂಲಕವೇ ಈ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

ಈ ಭೀಕರ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪ್ರಾದೇಶಿಕ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ತಕ್ಷಣವೇ ಯುದ್ಧ ನಿಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಲಕ್ಷಾಂತರ ಭಾರತೀಯರು ನೆಲೆಸಿರುವುದರಿಂದ, ಭಾರತ ಸರ್ಕಾರವು ಅಲ್ಲಿನ ಪರಿಸ್ಥಿತಿಯನ್ನು ಅತ್ಯಂತ ನಿಕಟವಾಗಿ ಮತ್ತು ಗಂಭೀರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಯುದ್ಧ ಪೀಡಿತ ಪ್ರದೇಶಗಳಲ್ಲಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಯನ್ನು ರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ಸಂಬಂಧಪಟ್ಟ ದೇಶಗಳ ರಾಯಭಾರ ಕಚೇರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಲಾಗುತ್ತಿದೆ. ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿಶ್ವದ ಎಲ್ಲಾ ಪ್ರಮುಖ ರಾಷ್ಟ್ರಗಳೊಂದಿಗೆ ಭಾರತವು ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button