ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ, ಭೂಕುಸಿತ – 17 ಜನ ಸಾವು!
Severe cloudburst and landslides in Jammu and Kashmir – 17 dead!

ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರಿದಿದ್ದು, ಪೂಂಚ್ ಮತ್ತು ರಜೌರಿಯಲ್ಲಿ ಭೂಕುಸಿತ ಉಂಟಾಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ 17 ಜನರು ಬಲಿಯಾಗಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ.
ಮಳೆಯ ಆರ್ಭಟಕ್ಕೆ ಹಲವು ಗ್ರಾಮಗಳು ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದ್ದು, ನಾಪತ್ತೆಯಾದವರ ಹುಡುಕಾಟ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ರಾಜ್ಯ ಸ್ಥಾನಮಾನಕ್ಕಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಮಳೆ ಅವಾಂತರದಿಂದಾಗಿ ಜಮ್ಮುವಿಗೆ ಹಿಂತಿರುಗಿದ್ದಾರೆ. ಮಳೆ ಮತ್ತು ಹಠಾತ್ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪರಿಶೀಲಿಸಿದರು.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರ ಮತ್ತು ಸಹಾಯ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.




