ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ “ನಂಬಿಕೆ ನಕ್ಷೆ” ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಆಸ್ತಿ ತೆರಿಗೆ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ” ಎಂದು ಹೇಳಿದರು.
“ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಪಾರದರ್ಶಕ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಯೋಜನೆಯಿಂದಾಗಿ ಸಾರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಅವರ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವಾರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು ಎಂದರು.
ʼಮನೆ ಬಾಗಿಲಿಗೆ ಬಂತು ಸರ್ಕಾರʼ ಕಾರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮಾರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ ಎಂದು ಹೇಳಿದರು.
ಈ ಮೂಲಕ ನಾಗರಿಕರು ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ಸಂಖ್ಯೆ ಮತ್ತು ಬಿಬಿಎಂಪಿ ಖಾತಾ ನೀಡಲಾಗುವುದು. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ ಎ ಖಾತಾ ನೀಡುತ್ತೇವೆ. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ ಬಿ ಖಾತಾ ನೀಡಲಾಗುವುದು ಎಂದು ಹೇಳಿದರು.