ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿವಾದಿತ ಹೇಳಿಕೆ ನೀಡಿರೋ ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜೆಡಿಎಸ್ ಕೆಂಡ ಕಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ಮತ ನೀಡದಿದ್ರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿಕೆ ನೀಡಿದ್ದ ಶಾಸಕ ಬಾಲಕೃಷ್ಣ ವಿರುದ್ಧ ಇಂದು ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಿಯೋಗವು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರ ವಿರುದ್ಧ ದೂರು ಸಲ್ಲಿಸಿದ್ದಾರೆ.

ಬಾಲಕೃಷ್ಣ ಅವರ ಶಾಸಕ ಸ್ಥಾನವನ್ನು ರದ್ದು ಮಾಡಬೇಕು. ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನೂ ರದ್ದುಪಡಿಸಬೇಕು’ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಲಾಯಿತು. ”ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ. ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ” ಎಂದು ಜೆಡಿಎಸ್ ತನ್ನ ದೂರಿನಲ್ಲಿ ತಿಳಿಸಿದೆ. ಜನತಾ ಪ್ರಾತಿನಿಧ್ಯ ಕಾಯಿದೆ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಅಲ್ಲದೇ, ಹೆಚ್.ಸಿ. ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಸಂಪೂರ್ಣ ಉಲ್ಲಂಘನೆಯಾಗಿದೆ. ಚುನಾವಣಾಧಿಕಾರಿಗಳು ಕೂಡಲೇ ಬಾಲಕೃಷ್ಣ ಮೇಲೆ ಕ್ರಮ ಕೈಗೊಳ್ಳುವಂತೆ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.


